
ಬೆಂಗಳೂರು, ಜನವರಿ 13: ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು (Muslim Woman) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ ಬಂಗಾಳ (West Bengal) ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸರ್ಬಾನು ಖಾತುನ್ ಹುಲಿಮಂಗಲದ ಪೋಡು ಪ್ರದೇಶದ ಬಳಿ ಇರುವ ಶೆಡ್‌ನಲ್ಲಿ ವಾಸವಾಗಿದ್ದರು.
ಕಳೆದ ಮೂರು ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಕ್ರಮ ವಲಸಿಗರ ಕುರಿತು ಕಾರ್ಯಾಚರಣೆ ನಡೆಸಿ, ಶೆಡ್‌ಗಳ ಮೇಲೆ ದಾಳಿ ನಡೆಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಸಂದರ್ಭದಲ್ಲಿ, ಅಕ್ರಮವಾಗಿ ವಾಸವಾಗಿದ್ದರೆನ್ನಲಾದ ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಶೆಡ್‌ಗಳ ಸಮೀಪದಲ್ಲೇ ವಾಸವಾಗಿದ್ದ ಸರ್ಬಾನು ಖಾತುನ್, ಶೆಡ್‌ಗಳನ್ನು ತೆರವುಗೊಳಿಸುವ ವೇಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಆ ವೇಳೆ ಅಲ್ಲಿದ್ದ ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ, ದಾಖಲೆಗಳ ಪರಿಶೀಲನೆಗಾಗಿ ಮಹಿಳೆಯನ್ನು ಎಫ್‌ಆರ್‌ಆರ್‌ಒ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫೀಸ್) ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.