ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ (Bhimanagouda Sanganagouda Patil) ಅವರು ಇಂದು (ಜೂನ್ 15) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು. ಇನ್ನು ಪ್ರಮಾಣವಚನ ಸ್ವೀಕರಿಸಿದ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.
ಲೋಕಾಯುಕ್ತರಾಗಿ ನೇಮಕವಾಗುವ ಮುನ್ನಾ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಹಾಗೂ ನಂತರ ಕರ್ನಾಟಕ ಲೋಕಾಯುಕ್ತದಲ್ಲಿ ಉಪಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಪ್ರಮಾಣ ವಚನ ಸ್ವೀಕರಿಸುವ ಮೊದಲು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಕರ್ನಾಟಕ ಲೋಕಾಯುಕ್ತ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಹೊರಡಿಸಿರುವ ಅಧಿಸೂಚನೆಯನ್ನು ವಾಚಿಸಿದರು.
ವಸತಿ ಸಚಿವ ವಿ ಸೋಮಣ್ಣ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್, ಪಿ. ರಾಜೀವ್, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ್, ಈಶ್ವರ್ ಖಂಡ್ರೆ, ಲೋಕಾಯುಕ್ತರಾಗಿ ಈ ಹಿಂದೆ ಸೇವೆ ಸಲ್ಲಿಸಿದ ಸಂತೋಷ್ ಹೆಗಡೆ ಮತ್ತು ಪಿ. ವಿಶ್ವನಾಥ್ ಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕರ್ನಾಟಕ ಉಚ್ಛ ನ್ಯಾಯಾಲಯವೂ ಒಳಗೊಂಡಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು, ವಕೀಲ ವೃಂದದ ಹಲವರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:43 am, Wed, 15 June 22