
ಬೆಂಗಳೂರು, ಜುಲೈ 11: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಐಪಿಎಲ್ (IPL) ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy Stadium Stampede) ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ, ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿತ್ತು. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ, ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.
ವರದಿ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲ್ತುಳಿತ ದುರಂತದ ಕುರಿತು ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಅವರು ತನಿಖೆ ನಡೆಸಿ ಇಂದು ಎರಡು ಸಂಪುಟದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು. ಬರುವ ಗುರುವಾರ (ಜು. 17) ದಂದು ನಡೆಯುವ ಸಚಿವ ಸಂಪುಟದಲ್ಲಿ ವರದಿ ಮಂಡಿಸುತ್ತೇನೆ ಎಂದು ಹೇಳಿದರು.
ಇದೇ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ಕೂಡ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಕಿಂಗ್ ವಿರಾಟ್ ಕೊಹ್ಲಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಅಂತ ಸಿಐಡಿ ತನಿಖೆಯಲ್ಲಿ ತಿಳಿದು ಬಂದಿದೆ ಮೂಲಗಳು ತಿಳಿಸಿದ್ದವು. ಘಟನೆಗೆ ಇನ್ನೂ ಹಲವು ಕಾರಣಗಳನ್ನು ಸಿಐಡಿ ತನಿಖೆಯಲ್ಲಿ ದಾಖಲಿಸಿಕೊಂಡಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿಗಾಗಿ ತರಾತುರಿ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಆರ್ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ ಕಾರಣ!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಹೈಕೋರ್ಟ್ನ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ನಡೆಸುತ್ತಿದೆ. ಕಳೆದ ತಿಂಗಳು ಜೂ.23 ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ (ನ್ಯಾಯಾಲಯಕ್ಕೆ ನೆರವಾಗುವ ವಕೀಲ) ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ಪೀಠ ನೇಮಕ ಮಾಡಿತ್ತು. ಪಿಐಎಲ್ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾರಿಗೆ ನೀಡಲು ಪೀಠ ಸೂಚನೆ ನೀಡಿತ್ತು.
Published On - 8:05 pm, Fri, 11 July 25