ಕಾವೇರಿ ಕಿಚ್ಚಿಗೆ ಕರುನಾಡು ಬಂದ್ ಸಾಧ್ಯತೆ, ಬೆಂಗಳೂರಿನಲ್ಲಿಂದು ಸಾಲು ಸಾಲು ಪ್ರತಿಭಟನೆ
ವಾಟಾಳ್ ನಾಗರಾಜ್ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದಾರೆ. ಕರ್ನಾಟಕ ಬಂದ್ ನಡೆಸಬೇಕಾ ಏನು ಅನ್ನೋದ್ರ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ. ಕಾವೇರಿ ಕಿಚ್ಚಿಗೆ ಕರುನಾಡು ಬಂದ್ ಆಗುತ್ತಾ? ಎಂಬ ಪ್ರಶ್ನೆ ಎದ್ದಿದೆ. ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಇಂದು ಫ್ರೀಡಂಪಾರ್ಕ್ ನಲ್ಲಿ ಮಹತ್ವದ ಸಭೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು, ಸೆ.23: ರಾಜ್ಯದಲ್ಲೇ ಬರಗಾಲ ಘೋಷಣೆಯಾಗಿದೆ. ಮುಂಗಾರು ಮಳೆ(Monsoon) ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಹೀಗಿರೋವಾಗ ತಮಿಳುನಾಡಿಗೆ ನೀರು ಹರಿಸೋಕೆ ಸಾಧ್ಯವೇ ಇಲ್ಲ. ಒಂದು ವೇಳೆ ನೀರು ಹರಿಸಿದ್ರೂ, ಮುಂದಿನ ಫೆಬ್ರವರಿಯಿಂದ ನಮ್ಮ ರಾಜ್ಯದಲ್ಲೇ ಕುಡಿಯಲು ಕೂಡ ನೀರು ಲಭಿಸೋದಿಲ್ಲ. ಇಷ್ಟೆಲ್ಲಾ ಅಂಶಗಳು ರಾಜ್ಯ ಸರ್ಕಾರಕ್ಕೆ(Karnataka Government) ಗೊತ್ತಿದ್ರೂ ಇದನ್ನು ಕೋರ್ಟ್ ಗಮನಕ್ಕೆ ತರೋದ್ರಲ್ಲಿ ವಿಫಲವಾಗಿದೆ. ಅಷ್ಟೇ ಅಲ್ಲದೇ, ನೀರಿನ ವಿಚಾರದಲ್ಲೂ ರಾಜಕೀಯ ನಡೆಸುತ್ತಿದೆ. ಇದನ್ನು ಹತ್ತಿಕ್ಕಲು ಇಂದು ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ(Protest) ನಡೆಸಲು ಮುಂದಾಗಿವೆ. ಕೇಂದ್ರ,ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿ ಬೆಂಗಳೂರು ಅಥವಾ ಕರ್ನಾಟಕ ಬಂದ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ಬಾರಿ ರಾಜ್ಯದಲ್ಲೇ ಮುಂಗಾರು ಮಳೆ ಸರಿಯಾದ ಪ್ರಮಾಣದಲ್ಲಿ ಆಗದೇ ಈಗಾಗಲೇ ಬರಗಾಲ ಘೋಷಿಸಲಾಗಿದೆ. ಇದರ ಮಧ್ಯೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ 75 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ಧ್ವನಿಯೆತ್ತೋದ್ರಲ್ಲಿ ರಾಜ್ಯ ಸರ್ಕಾರ ಹಾಗು ನಮ್ಮ ವಕೀಲರು ವಿಫಲರಾಗಿದ್ದಾರೆ. ಅಷ್ಟೇ ಅಲ್ಲದೇ, ಪ್ರಧಾನಿ ಮೋದಿಗೆ ಈ ವಿಚಾರವನ್ನು ಮನದಟ್ಟು ಮಾಡಬೇಕಿದ್ದ ರಾಜ್ಯದ ಸಂಸದರೂ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಂಸದರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟದಲ್ಲಿ ಭಾಗಿಯಾಗಬೇಕು ಅಂತ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕರೆ ಕೊಟ್ಟಿದ್ದಾರೆ.
ಸುದ್ದಿಗೋಷ್ಟಿ ಕರೆದ ವಾಟಾಳ್ ನಾಗರಾಜ್
ಇನ್ನು ವಾಟಾಳ್ ನಾಗರಾಜ್ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದಾರೆ. ಕರ್ನಾಟಕ ಬಂದ್ ನಡೆಸಬೇಕಾ ಏನು ಅನ್ನೋದ್ರ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ. ಕಾವೇರಿ ಕಿಚ್ಚಿಗೆ ಕರುನಾಡು ಬಂದ್ ಆಗುತ್ತಾ? ಎಂಬ ಪ್ರಶ್ನೆ ಎದ್ದಿದೆ. ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಇಂದು ಫ್ರೀಡಂಪಾರ್ಕ್ ನಲ್ಲಿ ಮಹತ್ವದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ 100 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಪ್ರಮುಖ ಅಪಾರ್ಟ್ ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಲಿವೆ. ಸಭೆಯ ಬಳಿಕ ಹೋರಾಟದ ರೂಪುರೇಷೆಯ ಬಗ್ಗೆ ನಿರ್ಧಾರ ಮಾಡಲಾಗುತ್ತೆ. ಬಂದ್ ಮೂಲಕ ಕಾವೇರಿ ನೀರಿನ ರಕ್ಷಣೆಗೆ ಆಗ್ರಹ ಮಾಡುವ ಬಗ್ಗೆ ಜಲಸಂರಕ್ಷಣಾ ಸಮಿತಿ ನಿರ್ಧಾರ ಮಾಡಲಿದೆ.
ಇದನ್ನೂ ಓದಿ: ಸೆ.23 ಮಂಡ್ಯ ಬಂದ್ಗೆ ಕರೆ: ಕಾನೂನು ಬಾಹಿರ ಚಟುವಟಿಕೆಗಳು ನಡೆದರೇ ಕ್ರಮ ಕೈಗೊಳ್ಳಲಾಗುವುದು: ಜಿ ಪರಮೇಶ್ವರ್
ರಾಜಧಾನಿಯಲ್ಲಿ ನಡೆಯಲಿರುವ ಪ್ರಮುಖ ಪ್ರತಿಭಟನೆಗಳು
- ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಲಿದೆ. ಕರವೇಯ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
- ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ- ತಮಿಳುನಾಡು ಅತ್ತಿಬೆಲೆ ಗಡಿ ಬಂದ್. ಕರವೇಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
- ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರಿನಿಂದ ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಮಹತ್ವದ ಸಭೆ. ಸಭೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
- ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಿಂದ ಬೆಳಿಗ್ಗೆ 11.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ
- ಮಧ್ಯಾಹ್ನ 1.30ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಟಿ. ಸುದ್ದಿಗೋಷ್ಟಿಯಲ್ಲಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ, ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹಾಗೂ ಕನ್ನಡಪರ ಹೋರಾಟಗಾರ ಹೆಚ್.ವಿ. ಗಿರೀಶ್ ಗೌಡ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ