
ಬೆಂಗಳೂರು, ಸೆಪ್ಟೆಂಬರ್ 11: ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ನೂತನ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಯೋಜನೆಯಡಿ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಹಾಗೂ ಬಾಗಲಕೋಟೆ ಸೇರಿದಂತೆ ರಾಜ್ಯದ 11 ಕಡಿಮೆ ಅಭಿವೃದ್ಧಿ ಹೊಂದಿರುವ ಜಿಲ್ಲೆಗಳಲ್ಲಿ ಒಟ್ಟು 1 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಬೃಹತ್ ಗುರಿಯನ್ನು ಹೊಂದಲಾಗಿದೆ. ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ, ಉದ್ಯೋಗ ಅರಸಿ ನಗರಗಳಿಗೆ ಆಗಮಿಸುವ ವಲಸೆಯನ್ನು ತಡೆಯುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
‘ಉದ್ಯೋಗ ನಿಧಿ’ ಯೋಜನೆಗಾಗಿ ಸರ್ಕಾರ ವಾರ್ಷಿಕ 305 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಅರ್ಹ MSMEಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ನೇಮಕ ಮಾಡಿಕೊಳ್ಳುವ ಪ್ರತಿ ಹೆಚ್ಚುವರಿ ಹೊಸ ಉದ್ಯೋಗಿಗೆ ತಿಂಗಳಿಗೆ 2,500 ರೂ.ನಂತೆ ಗರಿಷ್ಠ 24 ತಿಂಗಳುಗಳ (2 ವರ್ಷ) ಅವಧಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನ ದೊರೆಯಲಿದೆ. ಹೊಸ ಉದ್ಯೋಗ ಸೃಷ್ಟಿ ಹಾಗೂ ವೇತನ ಪಾವತಿಯನ್ನು ಸಮಗ್ರ ಪರಿಶೀಲನೆ ನಡೆಸಿದ ನಂತರವೇ ಈ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತದೆ.
ಈ ಯೋಜನೆಯನ್ನು ಸರ್ಕಾರದ ‘ಯುವ ನಿಧಿ’ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೆ ತರಲಾಗುತ್ತಿದ್ದು, ಯುವಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರಕಿಸಲು ಆದ್ಯತೆ ನೀಡಲಾಗಿದೆ. ಇದರಿಂದ ಹಿಂದುಳಿದ ಜಿಲ್ಲೆಗಳ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದ್ದು, ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ಸಿಗಲಿದೆ ಎಂದು ತಿಳಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ