ಲೋಕೋಪಯೋಗಿ ಇಲಾಖೆಯಿಂದ 20,000 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು: ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೂ ಅನುಮೋದನೆ

ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರೋಬೋಟಿಕ್ ಸರ್ಜರಿ ಉಪಕರಣ ಖರೀದಿ, ಲೋಕೋಪಯೋಗಿ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಅಡಿ ಒಟ್ಟು 20,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿ ಮತ್ತು ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕ್ಯಾಬಿನೆಟ್​​ ಸಭೆಯ ಪ್ರಮುಖ ನಿರ್ಧಾರಗಳು ಇಲ್ಲಿವೆ.

ಲೋಕೋಪಯೋಗಿ ಇಲಾಖೆಯಿಂದ 20,000 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು: ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೂ ಅನುಮೋದನೆ
ಕ್ಯಾಬಿನೆಟ್​​ ಸಭೆಯ ನಿರ್ಧಾರಗಳ ಬಗ್ಗೆ ಸಚಿವ ಈಶ್ವರ್​​ ಖಂಡ್ರೆ ಮಾಹಿತಿ
Edited By:

Updated on: Nov 05, 2026 | 7:30 PM

ಬೆಂಗಳೂರು, ನವೆಂಬರ್​​ 05: ಸಿಎಂ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೈದ್ಯಕೀಯ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವ ಈಶ್ವರ್​​ ಖಂಡ್ರೆ, ಲೋಕೋಪಯೋಗಿ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಒಟ್ಟು 20,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿಗಳು ನಡೆಯಲಿವೆ. ರಾಜ್ಯ ಹೆದ್ದಾರಿಗಳು, ಜಿಲ್ಲಾ ಪ್ರಮುಖ ರಸ್ತೆಗಳು ಸೇತುವೆಗಳ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 10 ಪ್ಯಾಕೇಜ್ಗಳಲ್ಲಿ ಬೆಂಗಳೂರು ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿಗೆ 3,409.02 ಕೋಟಿ ರೂಪಾಯಿ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ರೋಬೋಟಿಕ್ ಸರ್ಜರಿ ಉಪಕರಣ ಖರೀದಿ

🔴LIVE | Minister Eshwar Khandre Press Meet: ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿ | #tv9d

Loading...

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಹಾಗೂ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಒಟ್ಟು 40 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ರೋಬೋಟಿಕ್ ಸರ್ಜರಿ ಉಪಕರಣ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಸಂಸ್ಥೆಗೆ ತಲಾ 20 ಕೋಟಿ ರೂಪಾಯಿ ವೆಚ್ಚದಲ್ಲಿ ಉಪಕರಣ ಖರೀದಿ ನಡೆಯಲಿದೆ. ಈ ಪೈಕಿ 5 ಕೋಟಿ ರೂಪಾಯಿ ಆಯಾ ಸಂಸ್ಥೆಗಳ ಆಂತರಿಕ ಸಂಪನ್ಮೂಲದಿಂದ ಮತ್ತು ಉಳಿದ 15 ಕೋಟಿ ರೂಪಾಯಿ ಸರ್ಕಾರದ ಅನುದಾನದ ಮೂಲಕ ಭರಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ‘ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಕೆರೆಯಿಂದ ಹಲಗಲ್ ಲದ್ದಿ ಮದ್ದಿಹಳ್ಳಿ, ಖಂಡೇನಹಳ್ಳಿ, ಬೇತೂರು, ಮತ್ತು ಇತರ ಕೆರೆಗಳನ್ನು ತುಂಬಿಸುವ ಏತ ನೀರಾವರಿ ಕಾಮಗಾರಿಯನ್ನು 35 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಸಂಕೀರ್ಣದ ಕಾಮಗಾರಿಯನ್ನು 35.04 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಹುಮಹಡಿ ಪಾರ್ಕಿಂಗ್ ಸೌಲಭ್ಯಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಅನ್ವಯ ಬಂದರಿನಲ್ಲಿ 1,800 ಚದರ ಮೀಟರ್ ವಿಸ್ತೀರ್ಣದ ಜಾಗದಲ್ಲಿ PPP ಮಾದರಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಆಗಲಿದೆ. ಒಟ್ಟು 26 ಕೋಟಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ಮತ್ತು ಬಳ್ಳಾರಿ ಜಿಲ್ಲೆಯ ಕಂಪ್ಲಿ ಹೋಬಳಿಯ ಹರಳಹಳ್ಳಿಯಲ್ಲಿ ನೂತನ ಕೈಗಾರಿಕಾ ವಸಾಹತುಗಳನ್ನು ನಿರ್ಮಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಆಯವ್ಯಯ ಘೋಷಣೆಯಂತೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಂಪನ್ಮೂಲದಿಂದ ಈ ವಸಾಹತುಗಳ ನಿರ್ಮಾಣ ಕಾರ್ಯ ನಡೆಯಲಿದೆ.

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಸಂಪುಟ ಅನುಮೋದನೆ

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2026ಕ್ಕೆ ಸಂಪುಟ ಅನುಮೋದನೆ ನೀಡಿದ್ದು, ಐತಿಹಾಸಿಕ ಹಾಗೂ ಪುರಾತತ್ವ ಮಹತ್ವವುಳ್ಳ ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಸನ್ನತಿ ಅಭಿವೃದ್ಧಿಗಾಗಿ ಈ ಪ್ರಾಧಿಕಾರ ರಚಿಸಲಾಗುತ್ತಿದೆ. ದೇಶ ವಿದೇಶಗಳಿಂದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಈ ಕೇಂದ್ರದ ಅಭಿವೃದ್ಧಿಗಾಗಿ ವಿಧೇಯಕ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ಖಂಡ್ರೆ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:24 pm, Thu, 5 November 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us