ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್​​, ಜಾರ್ಜ್​​ ಪ್ರಮಾಣ

ಕರ್ನಾಟಕದಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲರು ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತು ಎಂ.ಬಿ. ಪಾಟೀಲ್ ಅವರಿಗೆ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ನೂತನ ಸಚಿವರನ್ನು ಅಭಿನಂದಿಸಿದರು.

ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್​​, ಜಾರ್ಜ್​​ ಪ್ರಮಾಣ
ಸಚಿವರಾಗಿ ಪ್ರಮಾಣವಚನ
Image Credit source: Tv9 Kannada

Updated on: Jun 03, 2026 | 5:53 PM

ಬೆಂಗಳೂರು, ಜೂನ್​​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​​ ಜೊತೆಗೆ ಡಿಸಿಎಂ ಪರಮೇಶ್ವರ್​​ ಸೇರಿ 12 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತುಎಂ.ಬಿ. ಪಾಟೀಲ್​​ರಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

7 ಬಾರಿ ಸಂಸದ, ಮೊದಲಬಾರಿ ಶಾಸಕರಾಗಿರುವ ಮುನಿಯಪ್ಪ

ಕರ್ನಾಟಕದ ಅತ್ಯಂತ ಹಿರಿಯ ಮತ್ತು ಪ್ರಭಾವಿ ದಲಿತ ನಾಯಕರಲ್ಲಿ ಒಬ್ಬರಾಗಿರುವ ಕೆ.ಎಚ್. ಮುನಿಯಪ್ಪ ಅವರು 1991 ರಿಂದ 2019 ರವರೆಗೆ ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ಸಂಸದರಾಗಿ ಆಯ್ಕೆಯಾದ್ದರು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎಸ್. ಮುನಿಸ್ವಾಮಿ ಅವರ ವಿರುದ್ಧ ಮೊದಲ ಬಾರಿಗೆ ಪರಾಭವಗೊಂಡ ಬಳಿಕ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (SC) ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​​; ಅಷ್ಟಕ್ಕೂ ಯಾರು ಈ ಅಜ್ಜಯ್ಯ?

3ನೇ ಬಾರಿ ಸಚಿವರಾದ ಎಂ.ಬಿ. ಪಾಟೀಲ್​​

ಇನ್ನು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಎಂಬಿ ಪಾಟೀಲ್​​ ಹಾಲಿ ಬಬಲೇಶ್ವರ ಕ್ಷೇತ್ರದ ಶಾಸಕರು. ಐದು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಎಂ.ಬಿ.ಪಾಟೀಲ್, ಮೊದಲಬಾರಿಗೆ ವಿಧಾನಸಭೆ ಪ್ರವೇಶಿಸಿದ್ದು, 1991ರಲ್ಲಿ.
1998ರಲ್ಲಿ ವಿಜಯಪುರ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದ ಇವರು, 2013ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವ , 2018ರಲ್ಲಿಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿ ಮತ್ತು 2023-26ರವರೆಗೆ ಸಿದ್ದರಾಮಯ್ಯನವರ ಸಂಪುಟದಲ್ಲಿ ಬೃಹತ್ ಕೈಗಾರಿಕಾ ಸಚಿವರಾಗಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕ ಜಾರ್ಜ್​​ಗೆ ಮತ್ತೊಮ್ಮೆ ಮಂತ್ರಿಗಿರಿ

ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿರುವ ಕೆ.ಜೆ.ಜಾರ್ಜ್ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರು. ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಕೆ.ಜೆ.ಜಾರ್ಜ್ , 1985ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದರು. ವೀರೇಂದ್ರ ಪಾಟೀಲ್‌, ಎಸ್‌.ಬಂಗಾರಪ್ಪ ಸರ್ಕಾರದಲ್ಲೂ ಸಂಪುಟ ದರ್ಜೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಗೃಹಇಲಾಖೆ ಸಚಿವರಾಗಿದ್ದರು. 2018ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಬೃಹತ್‌ & ಮಧ್ಯಮ ಕೈಗಾರಿಕೆ ಸಚಿವರಾಗಿದ್ದ ಇವರು 2023ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ನಿರ್ವಹಣೆ ಮಾಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:53 pm, Wed, 3 June 26

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us