ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ?: ರಣದೀಪ್ ಸುರ್ಜೇವಾಲ ಸ್ಫೋಟಕ ಹೇಳಿಕೆ
ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗ್ತಿರೋ 'ನವೆಂಬರ್ ಕ್ರಾಂತಿ' ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಚೌಕಟ್ಟು ಮೀರಿ ಮಾತನಾಡುವವರಿಗೆ ಖಡಕ್ ಎಚ್ಚರಿಕೆ ನೀಡಿರುವ ಅವರು, ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 03: ರಾಜ್ಯ ರಾಜಕೀಯದಲ್ಲಿ (Politics) ಸದ್ದು ಮಾಡ್ತಿರೋ ನವೆಂಬರ್ ಕ್ರಾಂತಿ ಬಗ್ಗೆ ಸಿಎಂ, ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.
ಮತಗಳ್ಳತನ ಆರೋಪದ ಬಗ್ಗೆಯೂ ಈ ವೇಳೆ ಸುರ್ಜೇವಾಲ ಮಾತನಾಡಿದ್ದು, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ. ಇನ್ನು ರಾಜ್ಯ ಕಾಂಗ್ರೆಸ್ ವತಿಯಿಂದಲೂ ಬೆಂಗಳೂರಿನ ಪುಲಕೇಶಿ ನಗರದಲ್ಲಿ ‘ವೋಟ್ ಚೋರಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ರಣದೀಪ್ ಸುರ್ಜೇವಾಲ ಹೇಳಿದ್ದೇನು?
ಖರ್ಗೆ ಆರೋಗ್ಯ ವಿಚಾರಿಸಿದ ಸುರ್ಜೇವಾಲ
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಗಿರುವ ಹಿನ್ನಲೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಕೂಡ ಉಪಸ್ಥಿತರಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



