ಬೆಂಗಳೂರು, (ಜೂನ್ 17): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ (POCSO Case) ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಂದು ಸಿಐಡಿ ವಿಚಾರಣೆ ಎದುರಿಸಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿಂದು ಸತತ 3 ಗಂಟೆ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಪುನೀತ್ ವಿಚಾರಣೆ ನಡೆಸಿದ್ದು, ಹಲವು ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ವಿಚಾರಣೆ ಮುಗಿದ ಬಳಿಕ ಬಿಎಸ್‌ವೈ ಸಿಐಡಿ ಕಚೇರಿಯಿಂದ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ದವಳಗಿರಿ ನಿವಾಸಕ್ಕೆ ವಾಪಸ್ ಆಗಿದ್ದಾರೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್ ಯಡಿಯೂರಪ್ಪ ಅವರ ಮೇಲಿತ್ತು. ಸಿಐಡಿ ಈ ಬಗ್ಗೆ ತನಿಖೆ ನಡೆಸುತ್ತಿತ್ತು. ಹಲವು ಬಾರಿ ನೋಟಿಸ್ ನೀಡಿದರು ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಗುರುವಾರ ಬೆಂಗಳೂರು ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರೆಂಟ್ ಜಾರಿ ಮಾಡಲು ಆದೇಶಿಸಿತ್ತು. ಆದರೆ, ಶುಕ್ರವಾರ ಹೈಕೋರ್ಟ್‌ನಲ್ಲಿ ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಹೈಕೋರ್ಟ್, ಬಂಧನ ಮಾಡದಂತೆ ಹಾಗೂ ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಇದನ್ನೂ ಓದಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್
ಯಡಿಯೂರಪ್ಪ ಮಾತ್ರವಲ್ಲದೇ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣ ಇಂದೇ ಮಾಜಿ ಸಚಿವ ಎಚ್ಡಿ ರೇವಣ್ಣ ಸಹ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಪೆನ್ಡ್ರೈವ್ ಕೇಸ್ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದಾರೆ. ಹೀಗಾಗಿ ಇಂದು ಸಿಐಡಿ ಕಚೇರಿಯಲ್ಲಿ ಮಾಜಿ ಸಿಎಂ, ಮಾಜಿ ಸಚಿವ, ಮಾಜಿ ಸಂಸದರ ವಿಚಾರಣೆ ನಡೆಯಿತು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರ ನಿನ್ನೆ(ಜೂ.12) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಘಟನೆ ನಡೆದು ಹಲವು ತಿಂಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41A ಅಡಿ ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆದಿಲ್ಲ.ಈ ಮಧ್ಯೆ ದೂರು ನೀಡಿದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಲು ಮನವಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:57 pm, Mon, 17 June 24