ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು (Bengaluru 5 Corporations) ರಚನೆ ಮಾಡಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಅಲ್ಲದೇ ಐದೂ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಸರ್ಕಾರ ಹೇಳಿತ್ತು. ಅದರಂತೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ.

ಬೆಂಗಳೂರು, (ಆಗಸ್ಟ್ 26): ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಗ್ರೇಟರ್ ಬೆಂಗಳೂರು (greater Bengaluru authority) ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರಿನ ಸಚಿವರು, ನಗರದ ಸಂಸದರು, ಶಾಸಕರು ಹಾಗೂ ಎಂಎಲ್ ಸಿಗಳು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಖ್ಯವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿದೆ.
ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಜಿಬಿಎ ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಉಪಾಧ್ಯಕ್ಷರಾಗಿ ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ಇನ್ನುಳಿದಂತೆ ಕೇಂದ್ರ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ಬೆಂಗಳೂರಿನ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಜಿಬಿಎ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ: ಗ್ರೇಟರ್ ಬೆಂಗಳೂರು: 5 ಪಾಲಿಕೆಗಳನ್ನು ರಚಿಸಿ ಸರ್ಕಾರ ಆದೇಶ
ಎನ್.ಆರ್.ಚೌಕದಲ್ಲಿರುವ ಪಾಲಿಕೆಯ ಆಡಳಿತಾಧಿಕಾರಿಯ ಕಚೇರಿಯನ್ನು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಯಾಗಿದೆ. ಇನ್ನು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲಾಗಿದೆ. ಈ ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.
5 ಪಾಲಿಕೆಗಳು ಯಾವ್ಯಾವು?
- ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
- ಬೆಂಗಳೂರು ಉತ್ತರ ಮಹಾನಗರ ಪಾಲಿಕೆ
- ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ
- ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
- ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ಅನ್ನು 2025ರ ಮೇ 15ರಿಂದ ಜಾರಿಗೊಳಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಯನ್ನು ಗ್ರೇಟರ್ ಬೆಂಗಳೂರು ಪ್ರದೇಶ ಎಂದು ಹೆಸರಿಸಲಾಗಿತ್ತು. ಆ ಪ್ರದೇಶದ ವ್ಯಾಪ್ತಿಯಲ್ಲಿಯೇ ಐದು ನಗರ ಪಾಲಿಕೆಗಳನ್ನು ರಚಿಸಿ ಜುಲೈ 19ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆಗಸ್ಟ್ 18ರವರೆಗೂ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:39 pm, Tue, 26 August 25




