ಬೆಂಗಳೂರು, (ಜನವರಿ 31): ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot) ತಿರಸ್ಕರಿಸಿಲ್ಲ. ಈ ಬಗ್ಗೆ ರಾಜಭವನ ಸ್ಪಷ್ಟೀಕರಣ ನೀಡಿದೆ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.
ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು: ವಿಧೇಯಕ ಮಂಡನೆಗೆ ಸೂಚನೆ
ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಅಧಿವೇಶನ ನಿಗದಿ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ನಾವು ಸುಗ್ರೀವಾಜ್ಞೆ ಕಳಿಸಿದಾಗ ಅಧಿವೇಶನ ನಿಗದಿಯಾಗಿರಲಿಲ್ಲ. ಸುಗ್ರೀವಾಜ್ಞೆ ರಾಜ್ಯಪಾಲರ ಕೈಸೇರುವ ವೇಳೆಗೆ ಅಧಿವೇಶನ ನಿಗದಿಯಾಗಿದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸುವುದಾಗಿ ತಿಳಿಸಿದರು.
ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದರು. ಇದು ಭಾರೀ ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು. ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯವಾಗಿ ಹಾಕಬೇಕೆಂದು ಕನ್ನಡಪರ ಸಂಘಟನೆಗಳು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ಮಾಡಿದ್ದವು. ಅಲ್ಲದೇ ಕೆಲವೆಡೆ ಬೇರೆ ಭಾಷೆಗಳ ಬೋರ್ಡ್ಗಳನ್ನು ತೆರವುಗೊಳಿಸಿ ಆಕ್ರೋಶ ಹೊರಹಾಕಿದ್ದವು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.