ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ‘ಕಲ್ಯಾಣ ಮಿತ್ರ’ ಏಕೀಕೃತ ಎಸ್‌ಸಿ, ಎಸ್‌ಟಿ ಸಹಾಯವಾಣಿಗೆ (SC, ST Helpline) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಇಲಾಖೆಗಳು, ನಿಗಮ, ಮಂಡಳಿ, ಸಂಸ್ಥೆ, ಆಯೋಗಗಳ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಸಹಾಯವಾಣಿಯ ಮೂಲಕ ಪಡೆದುಕೊಳ್ಳಬಹುದಾಗಿದೆ. ಸಹಾಯವಾಣಿಯ ಸಂಖ್ಯೆ 94823 00400. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವೂ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಹಾಯವಾಣಿ ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಯಿಂದ ಉಪಯೋಗವಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ನಮ್ಮ ಇಲಾಖೆ ಅತ್ಯಂತ ಪಾರದರ್ಶಕತೆಯಿಂದ ಕೆಲಸ ಮಾಡುತ್ತಿದೆ. ಈ ಸಹಾಯ ವಾಣಿಯು ಪರಿಶಿಷ್ಟ ಪಂಗಡದ ಪಾಲಿಗೆ ಒಂದು ವರದಾನವಾಗಿದೆ ಎಂದರು.
ಮುಖ್ಯಮಂತ್ರಿ @BSBommai ಅವರಿಂದ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ “ಕಲ್ಯಾಣ ಮಿತ್ರ” ಏಕಿಕೃತ ಎಸ್. ಸಿ. / ಎಸ್. ಟಿ. ಸಹಾಯವಾಣಿ ಉದ್ಘಾಟನೆ.@KotasBJP @sriramulubjp pic.twitter.com/jk1opKaKJz
— CM of Karnataka (@CMofKarnataka) May 2, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಅಧಿಕಾರಿಗಳು ಬಡವರ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯಬಾರದು. ನಿರ್ಧಾರಗಳನ್ನೇ ತೆಗೆದುಕೊಳ್ಳದ ಅಧಿಕಾರಿಗಳು ನಮಗೆ ಬೇಕಿಲ್ಲ. ನೀವು ಜನರ ಹಿತಕ್ಕೆ ಪೂರಕವಾಗುವ ನಿರ್ಧಾರಗಳನ್ನು ತೆಗೆದುಕೊಳ್ಳಿ. ನಿಮಗೆ ತೊಂದರೆಯಾದರೆ ನಾನಿದ್ದೇನೆ ಎಂದು ಭರವಸೆ ತುಂಬಿದರು.
ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳನ್ನು ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಆಡಳಿತಕ್ಕೆ ಸರ್ಕಾರಿ ನೌಕರರ ಸಹಯೋಗ ಇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಎಸ್‌ಸಿ/ಎಸ್‌ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ರದ್ದುಗೊಳಿಸುವುದು ಕ್ಷೋಭೆ, ವ್ಯಾಜ್ಯಗಳಿಗೆ ಕಾರಣವಾಗಬಹುದು: ಕೇಂದ್ರ
ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ ಮೀಸಲಾತಿ ಕಲ್ಪಿಸಲು ರಾಜ್ಯಪಾಲರಿಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ
Published On - 11:42 am, Mon, 2 May 22