ಕರ್ನಾಟಕದಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ!

ಕರ್ನಾಟಕದಲ್ಲಿ ಬಾಲ್ಯವಿವಾಹದ ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬರೋಬ್ಬರಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ ಉಳಿದಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ತಿಳಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ ಹಾಗೂ ಜನಜಾಗೃತಿಯ ಅಗತ್ಯವನ್ನು ಒತ್ತಿಹೇಳಿದ್ದಾರೆ. ಮಕ್ಕಳ ಸುರಕ್ಷತೆಗಾಗಿ ಸರ್ಕಾರಿ ಇಲಾಖೆಗಳು ಮತ್ತು ಸಾಮಾಜಿಕ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದ್ದಾರೆ.

ಕರ್ನಾಟಕದಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ!
ಸಾಂದರ್ಭಿಕ ಚಿತ್ರ

Updated on: Nov 22, 2026 | 11:26 AM

ಮುಖ್ಯಾಂಶಗಳು

  • ಕರ್ನಾಟಕದ ನ್ಯಾಯಾಲಯಗಳಲ್ಲಿ ಬರೋಬ್ಬರಿ 1,712 ಬಾಲ್ಯವಿವಾಹ ಪ್ರಕರಣಗಳು ವಿಚಾರಣೆಗಾಗಿ ಬಾಕಿ ಉಳಿದಿವೆ.
  • ಬಾಲ್ಯವಿವಾಹ ತಡೆಗೆ ನಿರಂತರ ಜನಜಾಗೃತಿ ಹಾಗೂ ಸಮುದಾಯದ ಸಹಭಾಗಿತ್ವ ಅಗತ್ಯ.
  • ಮಕ್ಕಳ ಸುರಕ್ಷತೆ, ಶಿಕ್ಷಣ ಮತ್ತು ಹಕ್ಕುಗಳ ರಕ್ಷಣೆಗೆ ನ್ಯಾಯಮೂರ್ತಿಗಳ ಕರೆ.

ಬೆಂಗಳೂರು, ನವೆಂಬರ್ 22: ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗನ್ನು ತೊಡೆದುಹಾಕಲು ಸರ್ಕಾರ ಮತ್ತು ವಿವಿಧ ಇಲಾಖೆಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ರಾಜ್ಯದಲ್ಲಿ ಇನ್ನೂ ಆತಂಕಕಾರಿ ಪರಿಸ್ಥಿತಿ ಮುಂದುವರಿದಿದೆ. ಕರ್ನಾಟಕದ ವಿವಿಧ ನ್ಯಾಯಾಲಯಗಳಲ್ಲಿ ಬರೋಬ್ಬರಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ ಉಳಿದಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ತಿಳಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ವಿರುದ್ಧದ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಈ ಆತಂಕಕಾರಿ ಅಂಕಿಅಂಶವನ್ನು ಬಹಿರಂಗಪಡಿಸಿದ್ದಾರೆ.

ರಾಜ್ಯದಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ!

ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಬಾಲ್ಯವಿವಾಹ ನಿರ್ಮೂಲನೆ ಹಾಗೂ ಮಕ್ಕಳ ಲೈಂಗಿಕ ಶೋಷಣೆ ಮತ್ತು ದುರ್ಬಳಕೆ ತಡೆ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್, ರಾಜ್ಯದ ನ್ಯಾಯಾಲಯಗಳಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ವಿಚಾರಣೆಗಾಗಿ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದ್ದಾರೆ.

Loading...

ಬಾಲ್ಯವಿವಾಹ ಎನ್ನುವುದು ಏಕಾಏಕಿ ನಡೆಯುವ ಘಟನೆ ಅಲ್ಲ. ಅದಕ್ಕೂ ಮುನ್ನ ಹಲವು ಮುನ್ಸೂಚನೆಗಳು ಕಾಣಿಸಿಕೊಳ್ಳುತ್ತವೆ. ಮಕ್ಕಳು ಶಾಲೆ ತೊರೆಯುವುದು, ಕುಟುಂಬಗಳ ಆರ್ಥಿಕ ಸಂಕಷ್ಟ ಹಾಗೂ ಶಿಕ್ಷಣಕ್ಕಿಂತ ಸಾಮಾಜಿಕ ನಿರೀಕ್ಷೆಗಳಿಗೆ ಆದ್ಯತೆ ನೀಡುವುದು ಇಂತಹ ಘಟನೆಗಳಿಗೆ ಕಾರಣವಾಗಬಹುದು. ಇಂತಹ ಸೂಚನೆಗಳನ್ನು ಆರಂಭದಲ್ಲೇ ಗುರುತಿಸಿ ಮಧ್ಯಪ್ರವೇಶಿಸಿದರೆ ಬಾಲ್ಯವಿವಾಹ ತಡೆಯಲು ಸಾಧ್ಯ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಕಾನೂನಿನ ಜೊತೆಗೆ ಜನಜಾಗೃತಿಯೂ ಅಗತ್ಯ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹದ ವಿರುದ್ಧ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ ಎಂದಿದ್ದಾರೆ.

ತಲೆಮಾರುಗಳಿಂದ ನಡೆದುಕೊಂಡು ಬಂದ ಸಂಪ್ರದಾಯ ಎಂಬ ನೆಪದಲ್ಲಿ ಬಾಲ್ಯವಿವಾಹವನ್ನು ಸಮರ್ಥಿಸುವ ಮನೋಭಾವ ಬದಲಾಗಬೇಕು. ಕೇವಲ ಕಾನೂನು ಜಾರಿಗೊಳಿಸುವುದರಿಂದ ಈ ಪಿಡುಗನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ. ನಿರಂತರ ಜನಜಾಗೃತಿ ಮತ್ತು ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ತಿಳಿಸಿದ್ದಾರೆ.

ಮಕ್ಕಳ ಸುರಕ್ಷತೆಗೆ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಲಿ

ಮಕ್ಕಳ ಮೇಲಿನ ಆನ್‌ಲೈನ್ ಲೈಂಗಿಕ ಶೋಷಣೆಯ ಅಪಾಯವೂ ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಯಿತು. ಮಕ್ಕಳ ರಕ್ಷಣೆಗಾಗಿ ವಿವಿಧ ಸರ್ಕಾರಿ ಇಲಾಖೆಗಳು, ಕಾನೂನು ಸೇವಾ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿಗಳು ಕರೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us