SC, ST ಮೀಸಲಾತಿ ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್: ತೀರ್ಪಿನ ಬೆನ್ನಲ್ಲೇ ಆಡಳಿತ ಮತ್ತು ವಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ

ಕರ್ನಾಟಕದಲ್ಲಿ ಹಿಂದಿನ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿದ್ದ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಹೆಚ್ಚಳದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಆರೋಪ-ಪ್ರತ್ಯಾರೋಪಗಳು ವ್ಯಕ್ತವಾಗಿವೆ.  ಅಂದಿನ ಬಿಜೆಪಿ ಸರ್ಕಾರ ಯಾವುದೇ ಪೂರ್ವ ಯೋಚಿಸದೆ, ಸಾಂವಿಧಾನಿಕ ರಕ್ಷಣೆ ಇಲ್ಲದೆ ಕೇವಲ ರಾಜಕೀಯ ಲಾಭಕ್ಕಾಗಿ ಮೀಸಲಾತಿ ಹೆಚ್ಚಿಸಿ ಈಗಿನ ಅವಾಂತರಕ್ಕೆ ಕಾರಣವಾಗಿದೆ ಎಂದು ಸಿದ್ದೆರಾಮಯ್ಯ ಆರೋಪಿಸಿದ್ದರೆ, ಕಾಂಗ್ರೆಸ್​​ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ.

SC, ST ಮೀಸಲಾತಿ ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್: ತೀರ್ಪಿನ ಬೆನ್ನಲ್ಲೇ ಆಡಳಿತ ಮತ್ತು ವಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ
ಸಿದ್ದರಾಮಯ್ಯ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿ. ಶ್ರೀರಾಮುಲು
Image Credit source: Tv9 Kannada and PTI
Edited By:

Updated on: Oct 13, 2026 | 5:08 PM

ಬೆಂಗಳೂರು, ಅಕ್ಟೋಬರ್​​ 13: ಕರ್ನಾಟಕದಲ್ಲಿ ಹಿಂದಿನ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿದ್ದ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಹೆಚ್ಚಳದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಒಟ್ಟು ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 56 ಕ್ಕೆ ಏರಿಸಿದ್ದು ಸಂವಿಧಾನ ಬಾಹಿರ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ತೀವ್ರ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನಾಗಮೋಹನ್ ದಾಸ್ ಸಮಿತಿ ವರದಿ ಆಧರಿಸಿ ಎಸ್‌ಸಿ ಮೀಸಲಾತಿಯನ್ನು ಶೇಕಡಾ 17 ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇಕಡಾ 7ಕ್ಕೆ ಏರಿಸಿ ಒಟ್ಟು ಮೀಸಲಾತಿಯನ್ನು ಶೇ. 56ಕ್ಕೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರದ ಆದೇಶ ರದ್ದುಗೊಳಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಹೈಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಜಟಾಪಟಿ ಆರಂಭವಾಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಂದಿನ ಬಿಜೆಪಿ ಸರ್ಕಾರ ಯಾವುದೇ ಪೂರ್ವ ಯೋಚಿಸದೆ, ಸಾಂವಿಧಾನಿಕ ರಕ್ಷಣೆ ಇಲ್ಲದೆ ಕೇವಲ ರಾಜಕೀಯ ಲಾಭಕ್ಕಾಗಿ ಮೀಸಲಾತಿ ಹೆಚ್ಚಿಸಿ ಈಗಿನ ಅವಾಂತರಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರವು ಇದನ್ನು 9ನೇ ಪರಿಚ್ಛೇದಕ್ಕೆ ಸೇರಿಸಿ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ನೀಡುವ ನಿರ್ಣಯವನ್ನು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಡಿಸಿಎಂ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದರೆ ಕೇಂದ್ರ ಸರ್ಕಾರ ಅಂದೇ 9ನೇ ಶೆಡ್ಯೂಲ್‌ಗೆ ಸೇರಿಸಿದ್ದರೆ ಇಂದು ಈ ಸಮಸ್ಯೆ ಬರುತ್ತಿರಲಿಲ್ಲ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಆದೇಶ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಬಿ. ಶ್ರೀರಾಮುಲು ಹಾಗೂ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ ಕಾರಿದ್ದು, ಹೈಕೋರ್ಟ್ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸರಿಯಾಗಿ ಹಾಜರಾಗದೆ ಹಾಗೂ ಪ್ರಬಲ ವಾದ ಮಂಡಿಸದೆ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದ್ದಾರೆ ಆಕ್ರೋಶ ಹೊರಹಾಕಿದ್ದಾರೆ.

ಮುಂದಿನ ಕಾನೂನು ಹೋರಾಟದ ಬಗ್ಗೆ ಸರ್ಕಾರ ಚಿಂತನೆ

ಹೈಕೋರ್ಟ್ ತೀರ್ಪಿನಿಂದಾಗಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಆಗಬಹುದಾದ ನಷ್ಟವನ್ನು ತಪ್ಪಿಸಲು ಸರ್ಕಾರ ಮುಂದಿನ ಕಾನೂನು ಹೋರಾಟದ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಅಲ್ಲದೆ ಮೀಸಲಾತಿಯನ್ನು ಸಂವಿಧಾನದ 9 ನೇ ಶೆಡ್ಯೂಲ್‌ಗೆ ಸೇರಿಸಿ ಮೀಸಲಾತಿಗೆ ರಕ್ಷಣೆ ಪಡೆಯಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸಲು ಕಾಂಗ್ರೆಸ್ ನೇತೃತ್ವದ ತೀರ್ಮಾನಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us