ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತನಿಖೆಗೆ ತಡೆಯಾಜ್ಞೆ ಮತ್ತೆ ವಿಸ್ತರಿಸಿದ ಹೈಕೋರ್ಟ್
ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ. ಇನ್ನೊಂದೆಡೆ, ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಂಡಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆಗೆ ಇದ್ದ ತಡೆಯಾಜ್ಞೆ ಮತ್ತೆ ಮುಂದೂಡಿಕೆಯಾಗಿದೆ. ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High Court), ತಡೆಯಾಜ್ಞೆಯನ್ನು ಏಪ್ರಿಲ್ 17ರವರೆಗೆ ವಿಸ್ತರಿಸಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸಿಬಿಐ ವಕೀಲರ ವಾದಮಂಡನೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ ಹಿನ್ನೆಲೆ ಏಪ್ರಿಲ್ 17ರವರೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ತನಿಖಾಧಿಕಾರಿ ತನಿಖೆಯ ಪ್ರಗತಿ ವರದಿ ಹಾಜರುಪಡಿಸಲಿ. ಫೆಬ್ರವರಿ 24ರ ಒಳಗೆ ತನಿಖೆ ವರದಿ ಸಲ್ಲಿಸಲಿ. ಅಲ್ಲಿಯವರೆಗೆ ತನಿಖೆ ಮುಂದುವರಿಸದಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಬಳಿಕ ನಡೆದ ವಿಚಾರಣೆ ವೇಳೆ ಕೋರ್ಟ್, ಮಾರ್ಚ್ 31ಕ್ಕೆ ಅರ್ಜಿ ವಿಚಾರನೆ ಮುಂದೂಡಿತ್ತ, ನಂತರ ಏಪ್ರಿಲ್ 6ಕ್ಕೆ ಮುಂದೂಡಲಾಗಿತ್ತು. ಬಳಿಕ ಏಪ್ರಿಲ್ 13ಕ್ಕೆ ಮುಂದೂಡಿಕೆಯಾಗಿತ್ತು.
ಇದನ್ನೂ ಓದಿ: ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿದ ಕರ್ನಾಟಕ ಹೈಕೋರ್ಟ್
ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಅಂತ್ಯ
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಂಡಿದೆ. ಅರ್ಜಿ ವಿಚಾರಣೆ ನಡೆಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಏಪ್ರಿಲ್ 18ಕ್ಕೆ ಆದೇಶ ಕಾಯ್ದಿರಿಸಿದೆ. ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಕುಲಕರ್ಣಿ ಪರ ವಕೀಲರಾದ ಸಿ ಹೆಚ್ ಹನುಮಂತರಾಯ, ಚುನಾವಣೆಗೆ ನಾಮಪತ್ರ ಸಲ್ಲಿಸಿ ಪ್ರಚಾರ ನಡೆಸಬೇಕಿದೆ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿದ್ದರು.
ನಿನ್ನೆ (ಏಪ್ರಿಲ್ 12) ನಡೆಸಿದ್ದ ವಿಚಾರಣೆ ವೇಳೆ ಪ್ರತಿವಾದ ಮಂಡಿಸಿದ ಸಿಬಿಐ ಪರ ವಕೀಲರು, ಯೋಗೇಶ್ ಗೌಡ ಕೊಲೆ ಪ್ರಕರಣದ 90 ಸಾಕ್ಷಿಗಳು ಧಾರವಾಡ ಜಿಲ್ಲೆಯಲ್ಲೇ ಇದ್ದಾರೆ ಎಂಬುದನ್ನು ಕೋರ್ಟ್ ಗಮನಕ್ಕೆ ತಂದರು. ಅಲ್ಲದೆ, ಸೂಚಕರ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ಇದೆ ಅಂತ ಹೇಳಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಅದರಂತೆ ಇಂದು ವಿಚಾರಣೆಯನ್ನು ಕೋರ್ಟ್ ಅಂತ್ಯಗೊಳಿಸಿದ್ದು, ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 pm, Thu, 13 April 23




