ಆಕ್ಷೇಪಾರ್ಹ ವಿಡಿಯೋ: ನಡ್ಡಾ, ಅಮಿತ್ ಮಾಳವಿಯಾಗೆ ಹೈಕೋರ್ಟ್‌ ರಿಲೀಫ್‌

| Updated By: ರಮೇಶ್ ಬಿ. ಜವಳಗೇರಾ

Updated on: Jun 21, 2024 | 8:18 PM

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಸಂಪತ್ತು ಹಂಚಿಕೆ' ಹೇಳಿಕೆ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್​ ಮಾಳವಿಯಾಗೆ ಹೈಕೋರ್ಟ್​ ತಾತ್ಕಾಲಿಕ ರಿಲೀಫ್ ನೀಡಿದೆ.

ಆಕ್ಷೇಪಾರ್ಹ ವಿಡಿಯೋ: ನಡ್ಡಾ, ಅಮಿತ್ ಮಾಳವಿಯಾಗೆ ಹೈಕೋರ್ಟ್‌ ರಿಲೀಫ್‌
ಅಮಿತ್ ಮಾಳವಿಯಾ, ಜೆ.ಪಿ.ನಡ್ಡಾ
Follow us on

ಬೆಂಗಳೂರು, (ಜೂನ್ 21): ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಸಂಪತ್ತು ಹಂಚಿಕೆ’ ಹೇಳಿಕೆಯನ್ನು ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda), ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾಗೆ ( amit malviya) ಹೈಕೋರ್ಟ್ (Karnataka High Court)​ ರಿಲೀಫ್ ನೀಡಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಬಿಜೆಪಿ ಅನಿಮೇಟೆಡ್ ವಿಡಿಯೋ ಹಂಚಿಕೊಂಡಿತ್ತು. ಈ ಸಂಬಂಧ ಕಾಂಗ್ರೆಸ್, ಜೆಪಿ ನಡ್ಡಾ ಹಾಗೂ ಅಮಿತ್ ಮಾಳವಿಯಾ ವಿರುದ್ಧ ದೂರು ದಾಖಲಿಸಿತ್ತು. ಈ ಪ್ರಕರಣವನ್ನು ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಮಧ್ಯಂತರ ಆದೇಶ ಹೊರಡಿಸಿದೆ.

ಕಲಬುರ್ಗಿಯ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡ ಜಗತ್ ಪ್ರಕಾಶ್ ನಡ್ಡಾ ಮತ್ತು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್: ಜೆಪಿ ನಡ್ಡಾ ಮತ್ತಿಬ್ಬರ ವಿರುದ್ಧ ದೂರು ನೀಡಿದ ಪ್ರಿಯಾಂಕ್ ಖರ್ಗೆ

ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸಬೇಕಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದ್ದು, ಎರಡನೇ ಪ್ರತಿವಾದಿಗೆ ತುರ್ತು ನೋಟಿಸ್​ಗೆ ಆದೇಶಿಸಲಾಗಿದೆ. ತನಿಖೆ ಮುಂದುವರಿಸಬಹುದು. ಆದರೆ, ತನಿಖಾಧಿಕಾರಿಯು ಅರ್ಜಿದಾರ ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವಿಯಾ ಖುದ್ದು ಹಾಜರಾತಿಗೆ ಸೂಚಿಸಬಾರದು ಎಂದು ಆದೇಶದಲ್ಲಿ ತಿಳಿಸಿದೆ. ನಡ್ಡಾ ಪರ ವಕೀಲ ಎಂ.ವಿನೋದ್ ಕುಮಾರ್, ದೂರಿನಲ್ಲಿ ಓಟು ಪಡೆಯಲು ಎಂದು ಹೇಳಲಾಗಿದೆ. ಈ ಪ್ರಕರಣದಲ್ಲಿ ಪ್ರಜಾಪ್ರತಿನಿಧಿ ಕಾಯಿದೆಯೆ ಸೆಕ್ಷನ್ 125 ಮಾತ್ರ ಅನ್ವಯಿಸುತ್ತದೆ. ಉಳಿದ ಸೆಕ್ಷನ್​ಗಳು ಅನ್ವಯಿಸಲ್ಲ ಎಂದು ಆಕ್ಷೇಪಿಸಿದರು.

ಪ್ರಕರಣದ ಹಿನ್ನೆಲೆ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಇನ್ಸ್ಟಾಗ್ರಾಂ ಖಾತೆಯಲ್ಲಿ ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ಅವರ ಅನಿಮೇಟೆಡ್ ವಿಡಿಯೋ ಪ್ರಕಟಿಸಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಆಸ್ತಿಯನ್ನು ಕಿತ್ತು, ಕಾಂಗ್ರೆಸ್ ಮೆಚ್ಚಿನ ಮುಸ್ಲಿಮ್ ಸಮುದಾಯಕ್ಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಅಲ್ಲದೇ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಂಪನ್ಮೂಲದಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ನೀಡಬೇಕು ಎಂದಿದ್ದರು ಎಂದು ಆಕ್ಷೇಪಿಸಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವೀಣ ಕುಮಾರ್ ಪಾಟೀಲ್ ಅವರು ಕಲಬುರ್ಗಿಯ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದರ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವಿಯಾ ವಿರುದ್ಧ ಪ್ರಜಾಪ್ರತಿನಿಧಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ ಮತ್ತು ಐಪಿಸಿ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ