ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್, ಏನಿದು ಕೇಸ್?
ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣದಲ್ಲಿ ಸಿದ್ದರಾಮಯ್ಯ ಬಿಗ್ ರಿಲೀಫ್ ಸಿಕ್ಕಿದೆ. ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರು, (ಸೆಪ್ಟೆಂಬರ್ 08): ಈ ಹಿಂದಿನ ಬಿಜೆಪಿ(BJP) ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಸಂಬಂಧ ಸಿದ್ದರಾಮಯ್ಯ (Siddaramaiah) ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ಆ ವೇಳೆ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂಬಂಧ ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದು ಕೋರಿ ಸಿದ್ದರಾಂಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
2022 ಏಪ್ರಿಲ್ 14ರಂದು ನಡೆದಿದ್ದ ಪ್ರತಿಭಟನೆ ಸಂಬಂಧ ಮಹಿಳಾ ಪಿಎಸ್ಐ ಜಾಹೀದಾ ನೀಡಿರುವ ದೂರು ಆಧರಿಸಿ ಸ್ವಯಂ ಪ್ರಕರಣ ದಾಖಲಾಗಿತ್ತು. ಈ ಕೇಸ್ಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲಿಸರು ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ವಿಎಸ್ ಉಗ್ರಪ್ಪ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿತ್ತು.
Published On - 12:56 pm, Fri, 8 September 23