
ಬೆಂಗಳೂರು, ಮಾರ್ಚ್ 25: ವಿಧಾನ ಪರಿಷತ್‌ನಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ (Waste management) ಕುರಿತು ಮಹತ್ವದ ಮಾಹಿತಿ ಹೊರಬಂದಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಪರಿಷತ್‌ನಲ್ಲಿ ಮಾತನಾಡುತ್ತಾ, ಬೆಂಗಳೂರು ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳು (ULBs) ಪ್ರತಿದಿನ ಒಟ್ಟು 7,304 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಸಂಗ್ರಹಿಸುತ್ತಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 6,083 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ ಎಂದು ವಿವರಿಸಿದರು.
ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 219 ನಗರ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸಂಸ್ಥೆಗಳಲ್ಲೂ ಈ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. 47 ನಗರ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್ ಸಿದ್ಧವಾಗಿದ್ದು, ಉಳಿದಡೆಗಳಿಗೂ ಶೀಘ್ರದಲ್ಲೇ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.
ಸ್ವಚ್ಛ ಭಾರತ ಮಿಷನ್–ಅರ್ಬನ್ 2.0 ಅಡಿಯಲ್ಲಿ 51 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೊಳ್ಳಲಾಗಿದ್ದು, 999 ಕಾಮಗಾರಿಗಳಲ್ಲಿ 542 ಪೂರ್ಣಗೊಂಡಿವೆ. ಒಣ ತ್ಯಾಜ್ಯ ಸಂಗ್ರಹ ಘಟಕಗಳಿಗೆ 259 ಕೋಟಿ ರೂ. ಹಾಗೂ 226 ನಗರ ಸಂಸ್ಥೆಗಳಲ್ಲಿ ಸ್ಯಾನಿಟರಿ ಲ್ಯಾಂಡ್‌ಫಿಲ್ ನಿರ್ಮಾಣಕ್ಕೆ 31 ಕೋಟಿ ರೂ. ಮೀಸಲಿಡಲಾಗಿದೆ. ಕಸ ಮಾಫಿಯಾ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.