
ಬೆಂಗಳೂರು, ಮೇ 19: ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ (Weather) ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್ಮೆಂಟ್ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಅಂದರೆ 42.4° C ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1.6° C ನಿಂದ 3.0° C ವರೆಗೆ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕೊಂಚ ಕಡಿಮೆ ಇರಲಿದೆ ಎಂದು ವರದಿ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕರಾವಳಿಯ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್, ರಾಜ್ಯದಲ್ಲಿ ಮೇ 21ರವರೆಗೆ ಮಳೆ ಸಾಧ್ಯತೆ
ಭಾರಿ ಮಳೆ ಮತ್ತು ಗಾಳಿಯಿಂದಾಗಿ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಬಹುದು ಮತ್ತು ರಸ್ತೆಗಳು ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗುವ ಆತಂಕವಿದೆ. ಹೀಗಾಗಿ ಸಾರ್ವಜನಿಕರು ಮಳೆ ಬರುವಾಗ ಮನೆಯ ಒಳಗೇ ಇರಲು, ಪ್ರಯಾಣವನ್ನು ಮುಂದೂಡಲು ಹಾಗೂ ಯಾವುದೇ ಕಾರಣಕ್ಕೂ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.