ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನಿನ್ನೆ (ಏಪ್ರಿಲ್ 22) ಸಂಜೆ ಕೂಡ ಹಲವೆಡೆ ಮಳೆಯಾಗಿತ್ತು. ಬಿಸಿಲಿನ ಬೇಗೆಯಲ್ಲಿ ಸುಡುತಿದ್ದ ರಾಜ್ಯಕ್ಕೆ ಮಳೆ ತಂಪು ಎರಗಿತ್ತು. ಸದ್ಯ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಳೆಯ ಬಗ್ಗೆ ಮುನ್ಸೂಚನೆ ಸಿಕ್ಕಿದೆ.
ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ನಿನ್ನೆ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಅನ್ವಯ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಏಪ್ರಿಲ್ 21, 22 ಮತ್ತು 25 ರಂದು ಬೀದರ್, ಕಲಬುರ್ಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಏಪ್ರಿಲ್ 23 ರಿಂದ 25 ರ ವರೆಗೆ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:42 am, Sun, 23 April 23