
ಬೆಂಗಳೂರು, ಜೂನ್ 02: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಕರಾವಳಿ ಭಾಗದಲ್ಲಿ ತಂಪಾದ ವಾತಾವರಣ ಇರಲಿದೆ. ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಹೊರತಾಗಿ, ಬಾಗಲಕೋಟೆ, ಬೆಳಗಾವಿ, ಬಿದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇಲ್ಲಿ ಬಿರುಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮಳೆ ಮತ್ತು ಬಿರುಗಾಳಿ ಬೀಸುವ ಸಮಯದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ ಮತ್ತು ಮರಗಳ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ. ರೈತರು ಕೂಡ ತಮ್ಮ ಬೆಳೆ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತೆ ವಹಿಸುವುದು ಸೂಕ್ತ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.