
ಬೆಂಗಳೂರು, ಆಗಸ್ಟ್ 09: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.
ಮಲೆನಾಡು ಮತ್ತು ದಕ್ಷಿಣ ಒಳನಾಡು
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಯೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಾದ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಒಟ್ಟಾರೆಯಾಗಿ, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಪ್ರಯಾಣಿಸುವವರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕಾಗಿ ವಿನಂತಿ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ