ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವಾಮಾನವಿರಲಿದ್ದು, ಅಕ್ಟೋಬರ್ 22ರಿಂದ ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ.

ಮುಖ್ಯಾಂಶಗಳು
- ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ.
- ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ.
- ಅಕ್ಟೋಬರ್ 22ರಂದು ರಾಜ್ಯಾದ್ಯಂತ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಬೆಂಗಳೂರು, ಅಕ್ಟೋಬರ್ 21: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಳೆಯ ವಾತಾವರಣ ಕಂಡುಬರಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಪ್ರಯಾಣಿಕರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಕರಾವಳಿ ಕರ್ನಾಟಕ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಿಡಿಲು ಹಾಗೂ ಗುಡುಗು ಸಹಿತ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನವೇ ಇರಲಿದೆ.
ದಕ್ಷಿಣ ಒಳನಾಡು
ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಶವರ್‌ಗಳಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವಾಮಾನ ಇರಲಿದೆ.
ನಾಳೆಯ (ಅ.22) ಹವಾಮಾನ ಮುನ್ಸೂಚನೆ
ಅಕ್ಟೋಬರ್ 22ರಂದು ರಾಜ್ಯದಾದ್ಯಂತ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಡ್ಯ, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
