
ಬೆಂಗಳೂರು, ಅಕ್ಟೋಬರ್ 20: ರಾಜ್ಯದಾದ್ಯಂತ ಹವಾಮಾನದಲ್ಲಿ ಪ್ರಮುಖ ಬದಲಾವಣೆಗಳು ಕಂಡುಬರುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ, ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ನಾಳೆ (ಅ. 21) ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಬಿರುಗಾಳಿ (30-40 ಕಿ.ಮೀ ವೇಗ) ಬೀಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ