
ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ 40-50 ಕಿಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆ ಆರ್ಭಟಿಸುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮುನ್ಸೂಚನೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆ ಹಾಗೂ ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಲು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.