
ಬೆಂಗಳೂರು, ಜೂನ್ 27: ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದರೊಂದಿಗೆ ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಿರುಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಳೆಯ ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಭಾಗದಲ್ಲಿಯೂ ಸಹ ಗಂಟೆಗೆ 30-40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಹವಾಮಾನ ವೈಪರೀತ್ಯದ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ