
ಬೆಂಗಳೂರು, ಅಕ್ಟೋಬರ್ 05: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದ್ದು, ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ಹವಾಮಾನದ ತೀವ್ರತೆ ಪರಿಗಣಿಸಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆ ಮುಂದುವರಿಯಲಿದೆ. ಉಳಿದಂತೆ ಮಂಡ್ಯ, ರಾಮನಗರ, ತುಮಕೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.
ನಾಳೆ ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಚಾಮರಾಜನಗರ, ರಾಮನಗರ, ತುಮಕೂರು, ಕೊಡಗು, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ವರದಿಯಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ