
ಬೆಂಗಳೂರು, ಅಕ್ಟೋಬರ್ 19: ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 20ರಿಂದ ಕರಾವಳಿ ಭಾಗದಲ್ಲಿ ಮಳೆ ಚುರುಕುಗೊಳ್ಳಲಿದ್ದು, ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೆ, ಬಿದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಈ ಭಾಗದಲ್ಲಿ ಅಕ್ಟೋಬರ್ 24ರವರೆಗೆ ಯೆಲ್ಲೊ ಅಲರ್ಟ್ ಜಾರಿಯಲ್ಲಿದೆ.
ನಾಳೆ (ಅ. 20) ದಕ್ಷಿಣ ಒಳನಾಡಿನ ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಹಗುರ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ