
ಬೆಂಗಳೂರು, ಜೂನ್ 06: ಕಾಲಿಡುತ್ತಿರುವ ಮುಂಗಾರು ಮಳೆಯ (Weather) ಅಬ್ಬರ ಕರ್ನಾಟಕದಲ್ಲಿ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಕೊಡಗು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಮತ್ತು ಸಿಡಿಲಿನ ಸಮಯದಲ್ಲಿ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು. ರೈತರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.