
ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳೀಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಮತ್ತು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ