
ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆ ಸುರಿಯುವ ವಾತಾವರಣವಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಶೀವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17 ಮತ್ತು 18ರಂದು ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಪ್ರಯಾಣಿಕರು ಎಚ್ಚರ ವಹಿಸಬೇಕು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಲಿದೆ. ಆದರೆ, ಸೆಪ್ಟೆಂಬರ್ 18ರಂದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ವಿಜಯಪುರ ಸೇರಿದಂತೆ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು, ನಾಳೆ ಎರಡೂ ದಿನಗಳಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹೊರಗೆ ಹೋಗುವಾಗ ಛತ್ರಿ ಹಾಗೂ ರೇನ್‌ಕೋಟ್ ಧರಿಸುವುದು ಮತ್ತು ಗುಡುಗು-ಮಿಂಚಿನ ಸಮಯದಲ್ಲಿ ಮರದ ಅಡಿಯಲ್ಲಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಸೂಕ್ತ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 am, Thu, 17 September 26