
ಬೆಂಗಳೂರು, ಮಾರ್ಚ್ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್ ಇರಬಹುದೆಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರಲಿದ್ದರೂ, ಬಳ್ಳಾರಿ, ದಾವಣಗೆರೆ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಸಾಧಾರಣ ಮಳೆಯನ್ನು ಹವಾಮಾನ ಇಲಾಖೆ ಅಂದಾಜಿಸಿದೆ. ಮುಂದಿನ ಕೆಲ ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಆತಂಕಕಾರಿ ಮಟ್ಟದಲ್ಲಿದೆ ಮೈಸೂರಿನ ಏರ್ ಕ್ವಾಲಿಟಿ!
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ಗರಿಷ್ಠ ತಾಪಮಾನ 34ರಿಂದ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21ರಿಂದ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:27 pm, Tue, 31 March 26