
ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.
ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:51 am, Fri, 24 April 26