
ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಂಭವವಿರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದಂತೆ, ಬಿರುಗಾಳಿಯ ತೀವ್ರತೆ ಇಲ್ಲಿ ಹೆಚ್ಚಾಗಿರಲಿದ್ದು, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ವಿಸ್ತರಣೆ ಹೆಚ್ಚಾಗಿರಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಇದಲ್ಲದೆ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ