ಕರ್ನಾಟಕದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಧಾರಾಕಾರವಾಗಿ ಸುರಿದು ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದ್ದ ಮಳೆ ಕೊಂಚ ವಿರಾಮ ಪಡೆದಂತೆ ಕಾಣುತ್ತಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಭಯಭೀತರಾಗಿದ್ದ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ನಿಟ್ಟುಸಿರು ಬಿಟ್ಟಿದ್ದು, ಮಳೆಯಿಂದಾದ ಹಾನಿಯನ್ನು ಸರಿಪಡಿಸುವುದರಲ್ಲಿ ನಿರತರಾಗಿದ್ದಾರೆ. ಸದ್ಯ ಮಳೆ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದ್ದು, ದಿನದ ಕೆಲ ಅವಧಿಯಲ್ಲಿ ಜೋರಾಗಿ ಮಳೆ ಸುರಿದು ಹೋಗುತ್ತಿದೆ.
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ (Light Rain) ಸಾಧ್ಯತೆಯಿದೆ. ಜತೆಗೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ.
ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂದಿನ ಕೆಲ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆ ವಿರಾಮ ನೀಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಶೀಘ್ರದಲ್ಲೇ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದ್ದು, ನಂತರ ಮಳೆಯ ಅಬ್ಬರ ಇಳಿಮುಖವಾಗಲಿದೆ ಎಂದು ಅಂದಾಜಿಸಲಾಗಿದೆ.
(Karnataka Weather Report Monsoon 2021 slow down many areas likely to get light rain)