
ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಹಾಗೂ 2 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 50-60 ಕಿ.ಮೀ ವೇಗ) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಮತ್ತು ರಾಯಚೂರಿನಲ್ಲೂ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಗುಡುಗು ಸಿಡಿಲಿನ ಅಬ್ಬರ ಜೋರಾಗಿರಲಿದೆ. ಮೇ 22ರಿಂದ ಮೇ 25, 2026ರ ಅವಧಿಯಲ್ಲಿ ಇಡೀ ಒಳನಾಡು ಭಾಗದಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ತೀವ್ರ ಸ್ವರೂಪದ ಗುಡುಗು ಸಹಿತ ಮಳೆ (Thunderstorm) ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಸಿಡಿಲು ಹಾಗೂ ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರಲು ಕೋರಲಾಗಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವಾಮಾನ ಇರಲಿದ್ದು, ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.