ಕರ್ನಾಟಕದ ಹವಾವಾನ ವರದಿ: ಬೆಂಗಳೂರಿನಲ್ಲಿ ಒಣಹವೆ ಮುಂದುವರಿಕೆ, ಕರಾವಳಿಗೆ ತುಂತುರು ಮಳೆ ಮುನ್ಸೂಚನೆ
ಕರ್ನಾಟಕದಲ್ಲಿ ನವೆಂಬರ್ 8 ಮತ್ತು 9ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ.

ಬೆಂಗಳೂರು, ನವೆಂಬರ್ 08: ಕರ್ನಾಟಕದ ಹವಾಮಾನದಲ್ಲಿ ಮತ್ತೆ ಕೊಂಚ ಬದಲಾವಣೆಯಾಗುವ ಮುನ್ಸೂಚನೆ ಇದೆ. ನವೆಂಬರ್ 8 ಮತ್ತು 9ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಒಣಹವೆಯ ವಾತಾವರಣ ಇರಲಿದೆ.
ಕರಾವಳಿ ಕರ್ನಾಟಕದಲ್ಲಿ ತುಂತುರು ಮಳೆ ಸಾಧ್ಯತೆ
ನವೆಂಬರ್ 8ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನವೆಂಬರ್ 8 ಮತ್ತು 9ರಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನಲ್ಲಿ ನವೆಂಬರ್ 8ರಂದು ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.
ಆದರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯ ಸಾಧ್ಯತೆ ಕಡಿಮೆ ಇದ್ದು, ಒಣಹವೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




