
ಬೆಂಗಳೂರು, ಆಗಸ್ಟ್ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು (Monsoon) ಮಳೆಯ ಚಟುವಟಿಕೆಗಳು ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯಂತೆ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಮಳೆರಾಯನ ಅಬ್ಬರವಿದ್ದು, ನಾಳೆಯೂ ಇದೇ ವಾತಾವರಣ ಮುಂದುವರೆಯಲಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ನಿವಾಸಿಗಳು ಎಚ್ಚರವಹಿಸಬೇಕಿದೆ.
ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮೇಘಾವೃತ ವಾತಾವರಣವಿರಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ನಾಳೆ (ಆ. 30) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಗಾಳಿಯ ವೇಗ ತಗ್ಗಲಿದ್ದು, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಸಾಧಾರಣ ಮಳೆ ಸುರಿಯಲಿದ್ದರೆ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ