Karnataka Weather Forecast: ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್!
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಜಾರಿಯಲ್ಲಿದ್ದು, ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಖ್ಯಾಂಶಗಳು
- ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಅತ್ಯಂತ ಭಾರೀ ಮಳೆಯ ‘ರೆಡ್ ಅಲರ್ಟ್’.
- ಉತ್ತರ ಕನ್ನಡ, ಉಡುಪಿ, ಬೆಳಗಾವಿ ಹಾಗೂ ಕೊಡಗಿನಲ್ಲಿ ಜಾರಿಯಲ್ಲಿದೆ ‘ಆರೆಂಜ್ ಅಲರ್ಟ್’.
- ರಾಜ್ಯದೆಲ್ಲೆಡೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆ.
ಬೆಂಗಳೂರು, ಆಗಸ್ಟ್ 02: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಯಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಪ್ರಚಂಡ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ.
ಎಲ್ಲೆಲ್ಲಿ ಯಾವ ಅಲರ್ಟ್?
- ರೆಡ್ ಅಲರ್ಟ್: ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುವ ಮತ್ತು ಗುಡ್ಡ ಕುಸಿಯುವ ಭೀತಿಯಿರುವುದರಿಂದ ಸಾರ್ವಜನಿಕರು ಎಚ್ಚರವಹಿಸುವಂತೆ ಸೂಚಿಸಲಾಗಿದೆ.
- ಆರೆಂಜ್ ಅಲರ್ಟ್: ಕರಾವಳಿಯ ಉತ್ತರ ಕನ್ನಡ, ಉಡುಪಿ ಸೇರಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ. ಇಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ನಿರಂತರ ಮಳೆಯಾಗಲಿದೆ.
- ಯೆಲ್ಲೋ ಅಲರ್ಟ್: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಗಾಳಿ
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.
ಸಮುದ್ರದಲ್ಲಿ ಅಲೆಗಳ ತೀವ್ರತೆ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ಮಲೆನಾಡಿನ ಪ್ರಯಾಣಿಕರು ಗರಿಷ್ಠ ಎಚ್ಚರಿಕೆ ವಹಿಸುವಂತೆ ಆಡಳಿತ ಮಂಡಳಿ ವಿನಂತಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




