
ಬೆಂಗಳೂರು, ಆಗಸ್ಟ್ 22: ಇಂದಿನ ಹವಾಮಾನ ವರದಿಯಂತೆ, ಕರ್ನಾಟಕದಾದ್ಯಂತ ಮುಂಗಾರು ಚುರುಕಾಗಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ 30 ರಿಂದ 40 ಕಿ.ಮೀ വേಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೆ ಕಡಲಿಗೆ ತೆರಳದಂತೆ ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅತ್ಯಂತ ವೇಗವಾಗಿ (ಗಂಟೆಗೆ 40 – 50 ಕಿ.ಮೀ) ಬೀಸುವ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಹಾಗೂ ಗಾಳಿ ಬೀಸಲಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಭಾಗಗಳಲ್ಲೂ ತಂಪಾದ ವಾತಾವರಣದೊಂದಿಗೆ ಮಳೆಯಾಗಲಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಬಿರುಗಾಳಿಯ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಲು ಕೋರಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ