
ಬೆಂಗಳೂರು, ಆಗಸ್ಟ್ 30: ರಾಜ್ಯಾದ್ಯಂತ ಇಂದಿನ ಹವಾಮಾನದಲ್ಲಿ ಗಮನಾರ್ಹ ವ್ಯತ್ಯಾಸಗಳು ಕಂಡುಬಂದಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಿಡಿದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಸತತವಾಗಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿಯ ಪ್ರಭಾವ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ.
ನಾಳೆ ಅಂದರೆ ಆಗಸ್ಟ್ 31 ರಂದೂ ಸಹ ರಾಜ್ಯದಾದ್ಯಂತ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಗಾಳಿ ಸಹಿತ ಹಗುರ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಕೆಲವೆಡೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ