
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ. ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಹಾಗೆಯೇ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಜೊತೆಗೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಕರ್ನಾಟಕ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗಾಳಿಯ ಮುನ್ಸೂಚನೆ
ಕಳೆದ 24 ಗಂಟೆಯ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 121 ಮಿ.ಮೀ. ಮಳೆಯಾಗಿದೆ. ಉಡುಪಿಯ ಕಾರ್ಕಳದ ನೀರೆಯಲ್ಲಿ 109.5, ತೀರ್ಥಹಳ್ಳಿಯ ಆಗುಂಬೆಯಲ್ಲಿ 91, ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಪಂಜಿಕಲ್ಲುವಿನಲ್ಲಿ 78.5, ಬೀದರ್ ದಕ್ಷಿಣದಲ್ಲಿ 62.2, ಶೃಂಗೇರಿಯ ಬೇಗಾರು ಮತ್ತು ಯಾದಗಿರಿಯ ಜೈಗ್ರಾಮ್ನಲ್ಲಿ ತಲಾ 57 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:42 pm, Tue, 21 July 26