
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಮಾನ್ಸೂನ್ ಮಳೆ ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಸತತ ಗಾಳಿ ಬೀಸಲಿದ್ದು, ಹಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ