
ಬೆಂಗಳೂರು, ನವೆಂಬರ್ 22: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಕಾರಿ ವಸತಿ ಶಾಲೆಗಳಲ್ಲೇ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಅನ್ನದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿವೆ. ಕುಡಿಯುವ ನೀರಿಗೂ ತತ್ವಾರ ಎದುರಾಗಿದ್ದು, ಬೇಸತ್ತ ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸುಮಾರು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕಾದ ಶಾಲೆಯಲ್ಲಿ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳುಗಳು ಪತ್ತೆಯಾಗಿದ್ದು, ಇದನ್ನು ಕಂಡ ಮಕ್ಕಳು ಆತಂಕಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲ, ಕಳೆದ ಎರಡು ದಿನಗಳಿಂದ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆಹಾರದ ಗುಣಮಟ್ಟ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಥಳೀಯ ವಕೀಲರ ತಂಡ ಕೂಡ ಬೆಂಬಲ ನೀಡಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಶಾಲೆಯ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಮಾಧ್ಯಮಗಳ ವರದಿ ಬಳಿಕ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಆಡಳಿತ ವಿಭಾಗದ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಪರಿಶೀಲನೆಯಲ್ಲಿ ಭಾಗಿಯಾಗಿದ್ದರು.
ಮೊದಲಿಗೆ ವಿದ್ಯಾರ್ಥಿಗಳಿಂದಲೇ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬಳಿಕ ಅಡುಗೆ ಕೋಣೆ ಮತ್ತು ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಹುಳು ಬಿದ್ದ ಅಕ್ಕಿ ಹಾಗೂ ಗೋಧಿ ಪತ್ತೆಯಾಗಿದ್ದು, ಅಡುಗೆ ಕೋಣೆಯ ಸ್ವಚ್ಛತೆಯ ಕೊರತೆಯೂ ಬೆಳಕಿಗೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಅಧಿಕಾರಿಗಳು ಪ್ರಾಂಶುಪಾಲರು, ಅಡುಗೆ ಸಿಬ್ಬಂದಿ ಹಾಗೂ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಾಲೆಯಲ್ಲಿರುವ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಪೌಷ್ಟಿಕ ಆಹಾರ ಒದಗಿಸಬೇಕಾದ ವಸತಿ ಶಾಲೆಯಲ್ಲೇ ಇಂತಹ ಅವ್ಯವಸ್ಥೆ ಕಂಡುಬಂದಿರುವುದು ದುರಂತ. ಅಧಿಕಾರಿಗಳ ಪರಿಶೀಲನೆ ಮತ್ತು ಭರವಸೆ ಕೇವಲ ಮಾತಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸೌಲಭ್ಯಗಳು ದೊರೆಯುವಂತಾಗಬೇಕಿದೆ. ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ