
ಬೆಂಗಳೂರು, ನವೆಂಬರ್ 22: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಈಗಾಗಲೇ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಇಡಿ, ಕೆಪಿಎಸ್‌ಸಿ ಮೂಲಕ ನಡೆದ ಇತರ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಕರಣಗಳ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದೆ. ವಿಶೇಷವಾಗಿ ಒಎಂಆರ್ ಶೀಟ್ ತಿದ್ದುಪಡಿ, ಲಂಚದ ಹಣ ವಸೂಲಿ ಹಾಗೂ ನಕಲಿ ದಾಖಲೆಗಳ ಸೃಷ್ಟಿಯಂತಹ ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ.
2025ರ ಜನವರಿ 23ರಂದು ನಡೆದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (AEE) ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಇಡಿ ಮಾಹಿತಿ ನೀಡಿದೆ. ಅಭ್ಯರ್ಥಿಗಳ ಒಎಂಆರ್ ಶೀಟ್‌ಗಳನ್ನು ತಿದ್ದಿರುವ ಆರೋಪ ಕೇಳಿಬಂದಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ, ಆಯ್ಕೆ ಸಮಿತಿಯ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಹಾಗೂ ಅಗತ್ಯ ಕೋರಂ ಇಲ್ಲದಿದ್ದರೂ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 10 ಅಭ್ಯರ್ಥಿಗಳಿಗೆ ಉದ್ಯೋಗ ನೀಡಿರುವ ಬಗ್ಗೆಯೂ ತನಿಖೆಯ ಅಗತ್ಯವಿದೆ ಎಂದು ಇಡಿ ತಿಳಿಸಿದೆ.
2023ರ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲೂ ಅಕ್ರಮದ ಆರೋಪ ಕೇಳಿಬಂದಿದೆ. ಪ್ರಕಾಶ್ ಎಂಬುವವರ ಬಳಿಯಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಂಗ್ವಾರ್ ಅವರ ಆಪ್ತ ಸಹಾಯಕ ಮಹೇಶ್ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿರುವ ಆರೋಪವಿದೆ. ಅಭ್ಯರ್ಥಿಗಳಿಂದ ತಲಾ 40 ಲಕ್ಷದಿಂದ 1.5 ಕೋಟಿ ರೂಪಾಯಿವರೆಗೆ ಹಣ ಸಂಗ್ರಹಿಸಿ, ಅದನ್ನು ಗ್ಯಾನೇಂದ್ರ ಅವರಿಗೆ ನೀಡಲಾಗಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮೋಟಾರು ವಾಹನ ನಿರೀಕ್ಷಕರು (MVI) ಹಾಗೂ ಸಹಾಯಕ ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮದ ಆರೋಪಗಳು ಕೇಳಿಬಂದಿವೆ. ಪ್ರಕಾಶ್ ಟಿ. ಅವರ ಕೈಬರಹದ ಟಿಪ್ಪಣಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅವುಗಳಲ್ಲಿ ಎಂವಿಐ ಹುದ್ದೆಗಳಿಗಾಗಿ ಅಕ್ರಮವಾಗಿ ಪಡೆದ ಲಂಚದ ಹಣದ ವಿವರಗಳಿವೆ ಎನ್ನಲಾಗಿದೆ. ಇದರ ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಆರೋಪದಲ್ಲಿ 21 ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರದ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ.
ಒಟ್ಟಿನಲ್ಲಿ, ಕೆಪಿಎಸ್‌ಸಿ ನೇಮಕಾತಿ ಹಗರಣದ ವ್ಯಾಪ್ತಿ ಮತ್ತಷ್ಟು ವಿಸ್ತರಿಸುವ ಸಾಧ್ಯತೆಯಿದೆ. ಈಗಾಗಲೇ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಹೊರತಾಗಿಯೂ ಇತರ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಯಬೇಕೆಂಬುದು ಜಾರಿ ನಿರ್ದೇಶನಾಲಯದ ನಿಲುವಾಗಿದೆ. ನ್ಯಾಯಾಲಯದ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಯಾವ ನಿರ್ಧಾರ ಹೊರಬೀಳಲಿದೆ ಎಂಬ ಕುತೂಹಲ ಮೂಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ