ಚಿಕಿತ್ಸೆ ನೆಪದಲ್ಲಿ ಕಳ್ಳಾಟ: ಕೆಪಿಎಸ್​ಸಿ ಹಗರಣದ ಆರೋಪಿ ಬಸವರಾಜ್ ಕನ್ನಾಳೆ ಪರಪ್ಪನ ಅಗ್ರಹಾರಕ್ಕೆ ವಾಪಸ್

ಕೆಪಿಎಸ್‌ಸಿ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮಂಡಿ ನೋವಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನ್ನಾಳೆ, ಚಿಕಿತ್ಸೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೈಲಾಧಿಕಾರಿಗಳ ವರದಿಯ ಬೆನ್ನಲ್ಲೇ ಅವರನ್ನು ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಸ್ಥಳಾಂತರಿಸಲಾಗಿದೆ.

ಚಿಕಿತ್ಸೆ ನೆಪದಲ್ಲಿ ಕಳ್ಳಾಟ: ಕೆಪಿಎಸ್​ಸಿ ಹಗರಣದ ಆರೋಪಿ ಬಸವರಾಜ್ ಕನ್ನಾಳೆ ಪರಪ್ಪನ ಅಗ್ರಹಾರಕ್ಕೆ ವಾಪಸ್
ಬಸವರಾಜ ಕನ್ನಾಳೆ
Edited By:

Updated on: Nov 25, 2026 | 8:26 AM

ಮುಖ್ಯಾಂಶಗಳು

  • ಮಂಡಿ ನೋವಿನ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಸವರಾಜ್ ಕನ್ನಾಳೆ.
  • ಚಿಕಿತ್ಸೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಜೈಲಾಧಿಕಾರಿಗಳಿಂದ ನ್ಯಾಯಾಲಯಕ್ಕೆ ವರದಿ.
  • ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆ, ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ.

ಬೆಂಗಳೂರು, ನವೆಂಬರ್ 25: ಕೆಪಿಎಸ್​ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಪಡೆದುಕೊಂಡಿದ್ದ ಕನ್ನಾಳೆ, ಚಿಕಿತ್ಸೆಯ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜೈಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ವಿಕ್ಟೋರಿಯಾ ಆಸ್ಪತ್ರೆಯಿಂದ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಮಂಡಿ ನೋವಿನ ನೆಪದಲ್ಲಿ ಆಸ್ಪತ್ರೆ ಸೇರಿದ್ದ ಕನ್ನಾಳೆ

ಕೆಪಿಎಸ್​ಸಿ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಕನ್ನಾಳೆ, ಮಂಡಿ ನೋವು ತೀವ್ರವಾಗಿದ್ದು ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ತಮ್ಮ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಕೊಡಿಸುವಂತೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಕನ್ನಾಳೆ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, 48 ಗಂಟೆಗಳ ಒಳಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬಸವರಾಜ್ ಕನ್ನಾಳೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

Loading...

ಮತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಚಿಕಿತ್ಸೆ ಪಡೆಯುವ ಸಂಬಂಧ ಕನ್ನಾಳೆ ಸುಳ್ಳು ಮಾಹಿತಿ ನೀಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಜೈಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಪರಿಗಣಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ವಾಪಸ್ ಜೈಲಿಗೆ ಕರೆತರುವಂತೆ ಸೂಚನೆ ನೀಡಲಾಗಿದೆ. ಅದರಂತೆ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಿಂದ ಬಸವರಾಜ್ ಕನ್ನಾಳೆಯನ್ನು ಬಿಡುಗಡೆಗೊಳಿಸಿ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

ಇನ್ನು ಕೆಪಿಎಸ್​ಸಿ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿ ಹಾಗೂ ಮಧ್ಯವರ್ತಿಯಾಗಿ ಗುರುತಿಸಿಕೊಂಡಿರುವ ಬಸವರಾಜ್ ಕನ್ನಾಳೆ ವಿರುದ್ಧ ತನಿಖೆ ಮುಂದುವರಿದಿದೆ. ಜಾರಿ ನಿರ್ದೇಶನಾಲಯ (ED) ಮತ್ತು ವಿಶೇಷ ತನಿಖಾ ತಂಡ (SIT) ಪ್ರಕರಣದ ತನಿಖೆ ನಡೆಸುತ್ತಿವೆ. ಈಗಾಗಲೇ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದೆ. KPSCಯಲ್ಲಿ ನಡೆದಿರುವ ವಿವಿಧ ಪರೀಕ್ಷೆಗಳ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಹೀಗಾಗಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us