ಯುಗಾದಿ,ರಂಜಾನ್ ಹಬ್ಬಕ್ಕೆ ಬೆಂಗಳೂರಿನಿಂದ ವಿಶೇಷ ಬಸ್ : ಮುಂಗಡ ಬುಕ್ಕಿಂಗ್‌ಗೆ ಡಿಸ್ಕೌಂಟ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ವತಿಯಿಂದ ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಬೆಂಗಳೂರಿನಿಂದ 2000 ವಿಶೇಷ ಬಸ್‌ಗಳು ರಾಜ್ಯ, ಹೊರ ರಾಜ್ಯದ ಪ್ರಮುಖ ನಗರಗಳಿಗೆ ಸಂಚಾರ ನಡೆಸಲಿವೆ. ಇನ್ನು ಮುಂಗಡ ಬುಕ್ಕಿಂಗ್ ಮಾಡುವವರಿಗೆ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗಿದೆ. ಬೆಂಗಳೂರಿನಿಂದ ಎಲ್ಲೆಲ್ಲಿಗೆ ಸಂಚರಿಸಲಿವೆ ಎನ್ನುವ ಸಂಪುರ್ಣ ವಿವರ ಇಲ್ಲಿದೆ.

ಬೆಂಗಳೂರು, (ಮಾರ್ಚ್ 26): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಯುಗಾದಿ(ugadi) ಹಾಗೂ ರಂಜಾನ್ ಹಬ್ಬದ(ramadan festival) ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿದ್ದು, ಮುಂಗಡ ಬುಕ್ಕಿಂಗ್‌ಗೆ ಅವಕಾಶವಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ಮಾರ್ಚ್ 30ರಂದು ಚಂದ್ರಮಾನ ಯುಗಾದಿ, ಮಾ.31ರಂದು ರಂಜಾನ್ ಹಬ್ಬವಿರುವುದರಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28 ರಿಂದ ಮಾ.30ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಆಗುವವರೆಗೆ ಮಾರ್ಚ್ 31ರಂದು ವಿಶೇಷ ಬಸ್ಗಳನ್ನು ಬಿಡಲಾಗಿದೆ.
ಇದನ್ನೂ ಓದಿ: ಯುಗಾದಿ, ರಂಜಾನ್ಗೆ ಊರಿಗೆ ಹೊರಡುವವರಿಗೆ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ, ಇಲ್ಲಿದೆ ವಿವರ
ಮೆಜೆಸ್ಟಿಕ್ನಿಂದ ಎಲ್ಲೆಲ್ಲಿಗೆ ಬಸ್ ಸೇವೆ?
ಈ ವಿಶೇಷ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚರಿಸಲಿವೆ.
ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಎಲ್ಲಿಗೆ ಬಸ್ ಲಭ್ಯ?
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
ಶಾಂತಿನಗರ ಬಸ್ ನಿಲ್ದಾಣದಿಂದ ಎಲ್ಲೆಲ್ಲಿಗೆ?
ಇನ್ನು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ತೆರಳಲಿವೆ.
ಮುಂಗಾಡ ಬುಕ್ಕಿಂಗ್ ಶೇ 10 ರಷ್ಟು ಡಿಸ್ಕೌಂಟ್
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್‌ನ್ನು https://ksrtc.in/ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ