ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಕೊವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Edited By:

Updated on: Nov 20, 2021 | 11:37 AM

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆ ಹಿನ್ನೆಲೆ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಜನಸ್ವರಾಜ್‌ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯವಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಅಧಿಕಾರ, ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೀಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗಬೇಡಿ. ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಹೆಚ್‌ಡಿಕೆ ಟ್ವೀಟ್ (Tweet) ಮಾಡಿದ್ದಾರೆ.

ಕೊವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ  ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಕರ್ನಾಟಕದ ರೈತರು ಇಷ್ಟು ದೊಡ್ಡ ಸಂಕಷ್ಟಕ್ಕೆ ಹಿಂದೆಂದೂ ಸಿಲುಕಿರಲಿಲ್ಲ. ಈ ವಿಷಯದಲ್ಲಿ ರಾಜ್ಯ ಸರಕಾರ ಮಾಡಿರುವುದೇನು? ಸಚಿವರು ಎಲ್ಲಿದ್ದಾರೆ? ಅಧಿಕಾರಿಗಳೇನು ಮಾಡುತ್ತಿದ್ದಾರೆ? ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಿಲ್ಲೆಗಳಿಗೆ ಕೊವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕುಮಾರಸ್ವಾಮಿಯನ್ನು ಕೇಳಿ ನಾವು ಸರ್ಕಾರ ನಡೆಸಬೇಕಾ; ಗೃಹ ಸಚಿವ ಆರಗ ಜ್ಞಾನೇಂದ್ರ
ಬಿಜೆಪಿ ಯವರು ಶಂಕ ಊದುತ್ತಾ ಹೋಗುತ್ತಿದ್ದಾರೆ ಎನ್ನುವ ಹೇಳಿಕೆ ವಿಚಾರವಾಗಿ ಕಲಬುರಗಿ ನಗರಗಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಕುಮಾರಸ್ವಾಮಿ ಅವರನ್ನು ಕೇಳಿ ಸರ್ಕಾರ ನಡೆಸಬೇಕಾ? ನಾವು ಹೋದಲೆಲ್ಲಾ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ್ದೇವೆ, ಜನರ ಸಮಸ್ಯೆ ಕೇಳಿದ್ದೇವೆ. ಕುಮಾರಸ್ವಾಮಿಯಂತೆ ಕ್ಯಾಮರಾ ಮುಂದೆ ನಿಲ್ಲಲಾಗುತ್ತಾ? ದಿನಕ್ಕೆ 2 ಬಾರಿ ಕ್ಯಾಮರಾ ಮುಂದೆ ನಿಲ್ಲಲು ಆಗುತ್ತಾ? ಎಂದು ಹೇಳಿದ್ದಾರೆ.

ಬಳಿಕ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನು ಕಾಂಗ್ರೆಸ್​ನವರು ಮುಚ್ಚಿ ಹಾಕಿದ್ದರು. ನಾವು ಅದನ್ನು ಹೊರತಗೆದಿದ್ದೇವೆ. ಈ ಹಿಂದೆ ಶ್ರೀಕಿ ಜೊತೆ ಅನೇಕ ಕಾಂಗ್ರೆಸ್ ಮುಖಂಡರ ಮಕ್ಕಳಿದ್ದರು. ಬೊಮ್ಮಾಯಿ ಸರ್ಕಾರದಲ್ಲಿ ಕಾಂಗ್ರೆಸ್​ನವರು ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಏನೇನೋ ಆರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ಬೊಮ್ಮಾಯಿ ತಲೆದಂಡ ಆಗೋದಿಲ್ಲಾ. ಪ್ರಕರಣ ಮುಚ್ಚಿ ಹಾಕಿದ್ದ ಕಾಂಗ್ರೆಸ್​ನವರ ತಲೆದಂಡವಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:
ಕಾಂಗ್ರೆಸ್​ನ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ; ನಮ್ಮ ಶಾಸಕರು ನನಗೆ ಎಲ್ಲಾ ತಿಳಿಸಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ರೈತರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲ: ಹೆಚ್​ಡಿ ಕುಮಾರಸ್ವಾಮಿ

Published On - 11:17 am, Sat, 20 November 21

Web contact

TV9 Kannada

Read More
Follow Us