ಲೋಕಸಭೆ ಚುನಾವಣೆ 2024: ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ. ವಶಕ್ಕೆ
ಪ್ರತ್ಯೇಕ ಎರಡು ಘಟನೆ: ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯಲ್ಲಿ ಸಾಗಿಸುತ್ತಿದ್ದ 13 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಲಕ್ಷ ರೂ. ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರು, ಮಾರ್ಚ್ 17: ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ (Model Code of Conduct) ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು (Election Officers) ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಜಾಸ್ ಟೋಲ್ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ತಮಿಳುನಾಡಿನ ಉದ್ಯಮಿ ರಘುಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಘುಪತಿ ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 58 ಲೀಟರ್ ಮದ್ಯ ಜಪ್ತಿ
ಬಾಗಲಕೋಟೆ: ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯ ಚಿಕ್ಕಪಡಸಲಗಿ ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 58 ಲೀಟರ್ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರುತಿ ಸುಜುಕಿ SX4 ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಆರೋಪಿ ಆನಂದ ಎಂಟಮಾನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಜಾನಕಿ ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 am, Sun, 17 March 24