AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಾಕಳಿ ಬಳಿ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಈರುಳ್ಳಿ ಕ್ಯಾಂಟರ್ ಲಾರಿ ಆಟೋಗೆ ಡಿಕ್ಕಿಯಾಗಿ ಬೈಕ್​ಗಳ ಮೇಲೆ ಬಿದ್ದ ಪರಿಣಾಮ ಈರುಳಿಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಾಯಗೊಂಡರೂ ಸ್ಥಳದಲ್ಲಿದ್ದ ಅನೇಕರು ನೆರವಾಗುವುದು ಬಿಟ್ಟು ಮೂಟೆಗಳಲ್ಲಿ ಈರುಳ್ಳಿ ಹೊತ್ತುಕೊಂಡು ಹೋಗಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!
ಮಾಕಳಿ ಬಳಿ ಸರಣಿ ಅಪಘಾತ
Ganapathi Sharma
|

Updated on: Jan 21, 2026 | 9:52 AM

Share

ನೆಲಮಂಗಲ, ಜನವರಿ 21: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಲಾರಿ, ಆಟೋ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕ್ಯಾಂಟರ್ ಲಾರಿಗೆ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಲಾರಿ ಮೊದಲು ಆಟೋಗೆ ಡಿಕ್ಕಿ ಹೊಡೆದು, ಬಳಿಕ ಎದುರಿಗೆ ಬರುತ್ತಿದ್ದ ಬೈಕ್‌ಗಳ ಮೇಲೆ ಬಿದ್ದಿದೆ.

ಲಾರಿ ಬೈಕ್ ಮೇಲೆ ಉರುಳಿದ ಪರಿಣಾಮ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ದೃಶ್ಯ ಅತ್ಯಂತ ಭೀಕರವಾಗಿದ್ದು, ರಸ್ತೆ ಮೇಲೆ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ.

ಮೂಟೆಗಳಲ್ಲಿ ಈರುಳ್ಳಿ ತುಂಬ್ಕೊಂಡು ಹೋದ ಜನ

ಅಚ್ಚರಿಯ ಸಂಗತಿ ಎಂದರೆ, ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದರೂ ಸಹ, ರಸ್ತೆ ಮೇಲೆ ಬಿದ್ದಿದ್ದ ಈರುಳ್ಳಿಯನ್ನು ಹೊತ್ತುಕೊಂಡು ಹೋಗಲು ಜನರು ಮುಗಿಬಿದ್ದರು. ಜನರು ಈರುಳ್ಳಿಗಾಗಿ ಮುಗಿಬಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿವೆ. ಮಾನವೀಯತೆ ಮರೆತ ಈ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ

ಘಟನೆ ಕುರಿತು ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

ವಿಡಿಯೋ & ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ